ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯ, ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಹಾಗೂ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜಂಟಿ ಆಶ್ರಯದಲ್ಲಿ ಮಂಗಳೂರು ವಿವಿ ಮಟ್ಟದ ಅಂತರ್ ಕಾಲೇಜು ಪುರುಷರ ಹಾಗೂ ಮಹಿಳೆಯರ ಕರಾಟೆ ಪಂದ್ಯಾಟಕ್ಕೆ ಶನಿವಾರ ತೆಂಕನಿಡಿಯೂರು ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಚಾಲನೆ ದೊರೆಯಿತು.

ಪಂದ್ಯಾಟ ಉದ್ಘಾಟಿಸಿದ ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ ಮಾತನಾಡಿ, ಕ್ರೀಡಾ ಮನೋಭಾವದೊಂದಿಗೆ ಸ್ಪರ್ಧಿಗಳು ಪಂದ್ಯಾಟದಲ್ಲಿ ಪಾಲ್ಗೊಂಡು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಪ್ರಖ್ಯಾತ್ ಶೆಟ್ಟಿ ಮಾತನಾಡಿ, ಕ್ರೀಡೆಯು ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಅಗತ್ಯವಾದ ಇಂಧನದಂತೆ ಕಾರ್ಯನಿರ್ವಹಿಸುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ನಿತ್ಯಾನಂದ ವಿ. ಗಾಂವ್ಕರ್ ಮಾತನಾಡಿ, ದೈಹಿಕ ಹಾಗೂ ಮಾನಸಿಕ ಕ್ಷಮತೆಯನ್ನು ಬೆಳೆಸಿಕೊಂಡ ವಿದ್ಯಾರ್ಥಿಗಳು ತಮ್ಮ ಜೀವನದ ಗುರಿಗಳನ್ನು ನಿಗದಿತ ಅವಧಿಯಲ್ಲಿ ಸಾಧಿಸಲು ಸಾಧ್ಯವಾಗುತ್ತದೆ ಎಂದರು. ಉದ್ಘಾಟನಾ ಕಾರ್ಯಕ್ರಮಕ್ಕೆ ಹರಿಪ್ರಸಾದ್ ರೈ ಅವರ ಪ್ರಾಯೋಜಕತ್ವದಲ್ಲಿ ಫ್ರೆಂಡ್ಸ್ ಅಂಬಲಪಾಡಿ ತಂಡದ ಹುಲಿವೇಷ ಪ್ರದರ್ಶನ ವಿಶೇಷ ಮೆರುಗು ನೀಡಿತು. ಕರಾಟೆ ಪಟುಗಳ ಉತ್ಸಾಹದ ನಡುವೆ ಹುಲಿವೇಷದ ಸಾಂಪ್ರದಾಯಿಕ ಹೆಜ್ಜೆಗಳು ಕ್ರೀಡಾಂಗಣದಲ್ಲಿ ಸಂಭ್ರಮದ ವಾತಾವರಣ ಮೂಡಿಸಿದವು.

ಕಾರ್ಯಕ್ರಮದಲ್ಲಿ ಸಹಾಯಕ ಪ್ರಾಧ್ಯಾಪಕಿ ಹಮೀದಾ ಬಾನು, ಹಳೆ ವಿದ್ಯಾರ್ಥಿ ಸಂಘದ ಸಂತೋಷ್ ಸುವರ್ಣ, ರೆಫ್ರಿ ಬೋರ್ಡ್ ಹಿರಿಯ ಉಪಾಧ್ಯಕ್ಷ ಡಾ. ನಿಶಾಂತ್, ಉಡುಪಿ ಜಿಲ್ಲಾ ಟೀಚರ್ಸ್ ಕರಾಟೆ ಅಸೋಸಿಯೇಷನ್ ಅಧ್ಯಕ್ಷ ರೋಹಿತ್, ಕಾರ್ಯದರ್ಶಿ ವಾಮನ್ ಪಾಲನ್, ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ಅಧ್ಯಕ್ಷ ರವಿಕುಮಾರ್ ಉದ್ಯಾವರ, ಮನೋಜ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ನಿರ್ದೇಶಕ ಹಾಗೂ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಬಾಲರಾಜ್ ವಂದಿಸಿದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಮಾರುತಿ ನಿರೂಪಿಸಿದರು.


