ಉಡುಪಿ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಮಟ್ಟದಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ ನೀಡಿವೆ. ಇದರಿಂದ ರಾಜ್ಯಾದ್ಯಂತ ಶೇ. 70 ರಿಂದ 95 ರಷ್ಟು ಬಡ ಹಿಂದುಳಿದ ಮಹಿಳೆಯರ ಜೀವನ ಮಟ್ಟ ಸುಧಾರಣೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಉಡುಪಿಯಲ್ಲಿ ಶನಿವಾರ 70ನೇ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡುತ್ತಿದ್ದರು. ನಮ್ಮ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಮಟ್ಟದಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ ನೀಡಿವೆ. ಇದರಿಂದ ರಾಜ್ಯಾದ್ಯಂತ ಶೇ. 70 ರಿಂದ 95 ರಷ್ಟು ಬಡ ಹಿಂದುಳಿದ ಮಹಿಳೆಯರ ಜೀವನ ಮಟ್ಟ ಸುಧಾರಣೆಯಾಗಿದೆ. ಶಕ್ತಿ, ಗೃಹಜ್ಯೋತಿ ಉಳಿತಾಯದ ಹಣ ಮತ್ತು ಗೃಹಲಕ್ಷ್ಮೀ ಹಣವನ್ನು ಪ್ರಮುಖವಾಗಿ ಆಹಾರ ಪದಾರ್ಥಗಳ ಖರೀದಿಗೆ ಬಳಸುತ್ತಿದ್ದು, ಇದರಿಂದ ಶೇ.88ರಷ್ಟು ಕುಟುಂಬಗಳು ಉತ್ತಮ ಮತ್ತು ಪೌಷ್ಟಿಕಾಂಶಯುಕ್ತ ಆಹಾರವನ್ನು ಸೇವಿಸುತ್ತಿದ್ದಾರೆ. ಶೇ. 83 ರಷ್ಟು ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಗ್ಯಾರಂಟಿಗಳು ಸಹಕಾರಿಯಾಗಿರುವ ಅಂಶ ಅಧ್ಯಯನದಿಂದ ಬಹಿರಂಗವಾಗಿದೆ ಎಂದು ಹೇಳಿದರು.

ಇದಕ್ಕೂ ಮೊದಲುಸಚಿವರು ಗೌರವ ರಕ್ಷೆ ಸ್ವೀಕರಿಸಿ ಮತ್ತು ಪಥ ಸಂಚಲನ ವೀಕ್ಷಿಸಿದರು. ಈ ವೇಳೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಎಂ.ಎ.ಗಫೂರ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ ಹೇರೂರು, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಟಿ.ಕೆ.ಸ್ವರೂಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಜಿಲ್ಲಾ ಪಂಚಾಯತ್ ಪ್ರತೀಕ್ ಬಾಯಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು .

ಕನ್ನಡ ರಾಜ್ಯೋತ್ಸವದ ಅಂಗವಾಗಿ ಉಡುಪಿಯ ಬೋರ್ಡ್ ಹೈಸ್ಕೂಲ್ ಮೈದಾನದಲ್ಲಿ ಸ್ತಬ್ಧ ಚಿತ್ರಗಳ ಮೆರವಣಿಗೆಗೆ ಚಾಲನೆ ನೀಡಲಾಯಿತು. ಬಳಿಕ ವಿವಿಧ ಇಲಾಖೆ ಗಳಿಂದ ರಚಿಸಲಾಗಿದ್ದ ಸ್ತಬ್ಧ ಚಿತ್ರಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿದರು.



