Saturday, September 12, 2026

spot_img

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ..

ಉಡುಪಿ: ಮಣ್ಣಿನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ಶ್ರದ್ಧಾಭಕ್ತಿಯಿಂದ ಪರಿಸರ ಸ್ನೇಹಿ ಗೌರಿ–ಗಣೇಶ ಹಬ್ಬ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಕರೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗೌರಿ–ಗಣೇಶ ಹಬ್ಬದ ಅಂಗವಾಗಿ ಕಾನೂನು ಸುವ್ಯವಸ್ಥೆ ಹಾಗೂ ಪರಿಸರ ಸಂರಕ್ಷಣೆಗೆ ಸಂಬಂಧಿಸಿದಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸೆ.13 ಮತ್ತು 14ರಂದು ಗೌರಿ–ಗಣೇಶ ಹಬ್ಬ ನಡೆಯಲಿದ್ದು, ಜಿಲ್ಲೆಯಾದ್ಯಂತ ಪರಿಸರ ಸ್ನೇಹಿ ಆಚರಣೆಗೆ ಆದ್ಯತೆ ನೀಡಬೇಕು ಎಂದರು.

ಪ್ಲಾಸ್ಟರ್ ಆಫ್ ಪ್ಯಾರಿಸ್ ಹಾಗೂ ರಾಸಾಯನಿಕ ಬಣ್ಣಗಳಿಂದ ತಯಾರಿಸಿದ ಮೂರ್ತಿಗಳು ನೀರಿನಲ್ಲಿ ಸುಲಭವಾಗಿ ಕರಗದೆ ಜಲಮಾಲಿನ್ಯ ಉಂಟುಮಾಡುವುದರ ಜತೆಗೆ ಜಲಚರಗಳಿಗೆ ಹಾನಿ ಉಂಟುಮಾಡುತ್ತವೆ. ಆದ್ದರಿಂದ ಮಣ್ಣಿನಂತಹ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಮೂರ್ತಿಗಳಿಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು. ಸ್ಥಳೀಯ ಸಂಸ್ಥೆಗಳು ಗುರುತಿಸಿರುವ ತಾತ್ಕಾಲಿಕ ಅಥವಾ ಕೃತಕ ವಿಸರ್ಜನಾ ತೊಟ್ಟಿಗಳಲ್ಲಿಯೇ ಮೂರ್ತಿಗಳನ್ನು ವಿಸರ್ಜಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು. ನದಿ, ಕೆರೆ, ಕೊಳ ಸೇರಿದಂತೆ ನೈಸರ್ಗಿಕ ಜಲಮೂಲಗಳಲ್ಲಿ ವಿಸರ್ಜನೆ ಅನಿವಾರ್ಯವಾಗಿರುವ ಸಂದರ್ಭದಲ್ಲಿ ಅಗತ್ಯ ಸುರಕ್ಷತಾ ವ್ಯವಸ್ಥೆ ಕಲ್ಪಿಸಿ, ಸಿಬ್ಬಂದಿ ಹಾಗೂ ರಕ್ಷಣಾ ತಂಡಗಳನ್ನು ನಿಯೋಜಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ವಿಸರ್ಜನೆ ಸಂದರ್ಭದಲ್ಲಿ ಹೂವು, ಹಾರ ಹಾಗೂ ಇತರ ಪೂಜಾ ಸಾಮಗ್ರಿಗಳನ್ನು ನೀರಿಗೆ ಎಸೆಯದೆ ಪ್ರತ್ಯೇಕವಾಗಿ ಸಂಗ್ರಹಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ಹಬ್ಬದ ವೇಳೆ ಏಕಬಳಕೆಯ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕಬೇಕು ಹಾಗೂ ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಧ್ವನಿವರ್ಧಕಗಳ ಬಳಕೆಗೆ ಇರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ಸಾರ್ವಜನಿಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಸಮಿತಿಗಳು ಸ್ಥಳೀಯ ಸಂಸ್ಥೆ ಹಾಗೂ ಪೊಲೀಸ್ ಇಲಾಖೆಯಿಂದ ಅಗತ್ಯ ಅನುಮತಿಗಳನ್ನು ಕಡ್ಡಾಯವಾಗಿ ಪಡೆಯಬೇಕು. ಪಿಒಪಿ ಮೂರ್ತಿಗಳ ತಯಾರಿಕೆ ಮತ್ತು ಮಾರಾಟ ತಡೆಯಲು ಹಬ್ಬಕ್ಕೂ ಮುನ್ನವೇ ತಯಾರಿಕಾ ಘಟಕಗಳು, ಸಂಗ್ರಹಣಾ ಗೋದಾಮುಗಳು ಹಾಗೂ ಮಾರಾಟ ಕೇಂದ್ರಗಳ ಮೇಲೆ ನಿರಂತರ ತಪಾಸಣೆ ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗಣೇಶ ವಿಸರ್ಜನಾ ಮೆರವಣಿಗೆ ಸಾಗುವ ಮಾರ್ಗದಲ್ಲಿ ವಿದ್ಯುತ್ ತಂತಿಗಳಿಂದ ಯಾವುದೇ ಅವಘಡ ಸಂಭವಿಸದಂತೆ ಮೆಸ್ಕಾಂ ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದರು. ಶಾಲಾ–ಕಾಲೇಜುಗಳು ಹಾಗೂ ಸ್ವಯಂಸೇವಾ ಸಂಸ್ಥೆಗಳ ಮೂಲಕ ಪಿಒಪಿ ಮೂರ್ತಿಗಳಿಂದಾಗುವ ಪರಿಸರ ಹಾನಿ ಮತ್ತು ಪರಿಸರ ಸ್ನೇಹಿ ಮೂರ್ತಿಗಳ ಬಳಕೆಯ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಲ್, ಎಸ್ಪಿ ಸುಧಾಕರ್ ನಾಯಕ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಡಾ. ಉದಯ ಶೆಟ್ಟಿ, ಜಿಲ್ಲಾ ಪರಿಸರ ಅಧಿಕಾರಿ ಡಾ. ಮಹೇಶ್ವರಿ ಸಿಂಗ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles