ಉಡುಪಿ : ಉಡುಪಿ ಶ್ರೀ ಕೃಷ್ಣ ಮಠದ ಶೀರೂರು ಪರ್ಯಾಯ ಮಹೋತ್ಸವದ ಅಂಗವಾಗಿ ನಡೆದ ಪುರ ಪ್ರವೇಶ ಮೆರವಣಿಗೆಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ಕೇಸರಿ ಧ್ವಜ ತೋರಿಸಿ ಚಾಲನೆ ನೀಡಿದ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಹಾಗೂ ಆಕ್ಷೇಪಕ್ಕೆ ಕಾರಣವಾಗಿದೆ.

ಪರ್ಯಾಯ ಮೆರವಣಿಗೆಗೆ ಚಾಲನೆ ನೀಡುವ ವೇಳೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ಕೇಸರಿ ಧ್ವಜವನ್ನು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರಿಗೆ ಹಸ್ತಾಂತರಿಸಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಧ್ವಜ ತೋರಿಸಿ ಮೆರವಣಿಗೆಗೆ ಚಾಲನೆ ನೀಡಿದ್ದರು. ಈ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದಂತೆ ಕೆಲವರು ಇದನ್ನು ರಾಜಕೀಯ ದೃಷ್ಟಿಕೋನದಿಂದ ವ್ಯಾಖ್ಯಾನಿಸಿ ಆಕ್ಷೇಪ ವ್ಯಕ್ತಪಡಿಸಿದ್ದರು.

ಈ ಕುರಿತು ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಪರ್ಯಾಯ ಮಹೋತ್ಸವದ ಸಂದರ್ಭದಲ್ಲಿ ತಾವು ಉಡುಪಿ ನಗರಸಭೆಯ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾಗಿ ತಿಳಿಸಿದ್ದಾರೆ. “ನಗರಸಭೆಯ ಆಡಳಿತಾಧಿಕಾರಿಯಾಗಿ ಪುರ ಪ್ರವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ. ಇದನ್ನು ಹೊರತುಪಡಿಸಿ ಯಾವುದೇ ರಾಜಕೀಯ ಪ್ರೇರಿತ ಭಾಗವಹಿಸುವಿಕೆ ಇಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪುರ ಪ್ರವೇಶದ ಸಂದರ್ಭದಲ್ಲಿ ಯತಿಗಳಿಗೆ ಪೌರ ಸಮ್ಮಾನ ಸಲ್ಲಿಸುವ ಕಾರ್ಯಕ್ರಮ, ಸರ್ವಜ್ಞ ಪೀಠಾರೋಹಣದ ನಂತರ ನಡೆದ ದರ್ಬಾರು ಸಭೆ ಸೇರಿದಂತೆ ಧಾರ್ಮಿಕ ಹಾಗೂ ಅಧಿಕೃತ ಕಾರ್ಯಕ್ರಮಗಳಲ್ಲಿ ಆಡಳಿತಾಧಿಕಾರಿಯಾಗಿ ಭಾಗವಹಿಸಿದ್ದೇನೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ. ಈ ಹಿನ್ನೆಲೆಯನ್ನು ಸಾರ್ವಜನಿಕರು ಸರಿಯಾದ ರೀತಿಯಲ್ಲಿ ಗಮನಿಸಬೇಕು ಎಂದು ಅವರು ವಿನಂತಿಸಿದ್ದಾರೆ.

ಪರ್ಯಾಯ ಮಹೋತ್ಸವವು ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯ ಭಾಗವಾಗಿದ್ದು, ಆಡಳಿತಾತ್ಮಕ ಕರ್ತವ್ಯಗಳ ಹಿನ್ನೆಲೆಯಲ್ಲಿ ತಾವು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗಿ ಜಿಲ್ಲಾಧಿಕಾರಿಗಳು ಪುನರುಚ್ಚರಿಸಿದ್ದಾರೆ.



