Thursday, October 8, 2026

spot_img

ಬಿಜೆಪಿ ವಿರುದ್ಧ ಕಾಂಗ್ರೆಸ್ ಸಮರ: ಕಾರ್ಕಳದಲ್ಲಿ ‘ಸತ್ಯಮೇವ ಜಯತೆ’ ಪ್ರತಿಭಟನೆ

ಉಡುಪಿ : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ ಟೀಕೆ ಹಾಗೂ ಆರೋಪಗಳಿಗೆ ತಿರುಗೇಟು ನೀಡುವ ನಿಟ್ಟಿನಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಗುರುವಾರ ತಾಲೂಕು ಕಚೇರಿ ಮುಂಭಾಗದಲ್ಲಿ ‘ಸತ್ಯಮೇವ ಜಯತೆ’ ಬೃಹತ್ ಪ್ರತಿಭಟನಾ ಸಭೆ ನಡೆಯಿತು. ಪ್ರತಿಭಟನಾ ಸಭೆಯಲ್ಲಿ ಕಾಂಗ್ರೆಸ್ ನಾಯಕರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿವಿಧ ನೀತಿಗಳು, ಅಭಿವೃದ್ಧಿ ವಿಚಾರಗಳು ಮತ್ತು ರಾಜಕೀಯ ಬೆಳವಣಿಗೆಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಪ್ರತಿಭಟನೆಯ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರು ಕಾರ್ಕಳ ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಭದ್ ರಾವ್ ನೇತೃತ್ವದ ತಂಡ ಹಾಡಿನ ಮೂಲಕ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿತು.

ಕಾಂಗ್ರೆಸ್ ಮುಖಂಡ ಸುಧೀರ್ ಕುಮಾರ್ ಮರೋಳ್ಳಿ ಮಾತನಾಡಿ, ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಬಿಜೆಪಿಯವರೂ ಪಡೆಯುತ್ತಿದ್ದಾರೆ ಎಂದು ಹೇಳಿದರು. ಸರ್ಕಾರದ ವಿವಿಧ ಜನಪರ ಕಾರ್ಯಕ್ರಮಗಳನ್ನು ಉಲ್ಲೇಖಿಸಿದ ಅವರು, ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಆದ್ಯತೆ ನೀಡಿದೆ ಎಂದರು. ಅಂಗನವಾಡಿ ಸಹಾಯಕಿಯರ ಗೌರವಧನ ಹೆಚ್ಚಳ ಸೇರಿದಂತೆ ಹಲವು ಕ್ರಮಗಳನ್ನು ಸರ್ಕಾರ ಕೈಗೊಂಡಿದೆ ಎಂದು ಹೇಳಿದ ಅವರು, ಗಣರಾಜ್ಯೋತ್ಸವ ಪರೇಡ್‌ನಲ್ಲಿ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನೀಡದ ಮೂಲಕ ಬಿಜೆಪಿ ಅವಮಾನ ಮಾಡಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಮುಖಂಡ ಉದಯಕುಮಾರ್ ಶೆಟ್ಟಿ ಮಾತನಾಡಿ, ಟೆಂಪಲ್ ಟೂರಿಸಂ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್ ಸರ್ಕಾರ ಕೊಡುಗೆ ನೀಡಿದೆ. ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ಆರ್ಥಿಕ ಭದ್ರತೆ ಒದಗಿಸುವ ಪ್ರಯತ್ನ ನಡೆದಿದೆ ಎಂದರು. ಕೇಂದ್ರದ ಬಿಜೆಪಿ ಸರ್ಕಾರದ ನೀತಿಗಳಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂದು ಟೀಕಿಸಿದ ಅವರು, ಜನಸಾಮಾನ್ಯರ ಬದುಕಿನ ಮೇಲೆ ಬೀರುತ್ತಿರುವ ಪರಿಣಾಮಗಳ ಕುರಿತು ಸರ್ಕಾರಗಳು ಗಮನಹರಿಸಬೇಕು ಎಂದು ಹೇಳಿದರು. ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ಕಾರ್ಕಳ ಕ್ಷೇತ್ರದ ಅಭಿವೃದ್ಧಿಗೆ ಕಾಂಗ್ರೆಸ್ ಮಹತ್ವದ ಕೊಡುಗೆ ನೀಡಿದೆ ಎಂದರು. ನೋಟು ಅಮಾನ್ಯೀಕರಣ, ಜಿಎಸ್‌ಟಿ, ಬೆಲೆ ಏರಿಕೆ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ನೀತಿಗಳ ವಿರುದ್ಧ ಕಾಂಗ್ರೆಸ್ ನಿರಂತರವಾಗಿ ಹೋರಾಟ ನಡೆಸಿದೆ ಎಂದು ಹೇಳಿದರು. ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸೇರಿದಂತೆ ವಿವಿಧ ವಿಚಾರಗಳಲ್ಲಿಯೂ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಜನರ ಹಕ್ಕುಗಳು ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಸಂಬಂಧಿಸಿದ ವಿಚಾರಗಳಲ್ಲಿ ಪಕ್ಷ ಹೋರಾಟ ಮುಂದುವರಿಸಲಿದೆ ಎಂದರು.

ರಾಮನ ಹೆಸರಿನಲ್ಲಿ ಹಣ ಲೂಟಿ ಮಾಡಲಾಗಿದೆ ಎಂದು ಬಿಜೆಪಿ ವಿರುದ್ಧ ಆರೋಪಿಸಿದ ಸೊರಕೆ, ಬಿಜೆಪಿ ಸಂವಿಧಾನವನ್ನು ಬದಲಾಯಿಸುವ ಪ್ರಯತ್ನ ಮಾಡುತ್ತಿದೆ ಎಂದು ಟೀಕಿಸಿದರು. ಧರ್ಮ ಮತ್ತು ದೇವರ ಹೆಸರಿನಲ್ಲಿ ಮತ ಕೇಳುವ ಬಿಜೆಪಿ, ದೇಶದ ನಾಗರಿಕರ ಪೌರತ್ವವನ್ನೇ ಪ್ರಶ್ನಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ಕಾರ್ಕಳ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ, ವಾಗ್ಮಿ ಲಕ್ಷ್ಮೀಶ್ ಕಮಲಡ್ಕ, ನಾರಾಯಣ ಗುರು ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಶಂಕರ್ ಶೇರಿಗಾರ್, ಸುಧಾಕರ ಕೋಟ್ಯಾನ್, ರವಿಶಂಕರ್, ಬಿಪಿನ್ ಚಂದ್ರಪಾಲ್, ರಮೇಶ್ ಕಾಂಚನ್, ಶೇಖರ ಮಡಿವಾಳ, ವಿಶ್ವಾಸ್ ಅಮೀನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಪ್ರದೀಪ್ ಬೆಲಾಡಿ ಹಾಗೂ ಹರೀಶ್ ಕಿಣಿ ಕಾರ್ಯಕ್ರಮ ನಿರೂಪಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles