Friday, October 2, 2026

spot_img

ಬೀಡಾಡಿ ದನವನ್ನು ಕಾರಿನಲ್ಲಿ ತುಂಬಿಸಿಕೊಂಡು ಪರಾರಿ: ಪ್ರಮುಖ ಆರೋಪಿ ಬಂಧನ

ಉಡುಪಿ: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಹಿಂಸಾತ್ಮಕವಾಗಿ ಎಳೆದು ಬಿಳಿ ಬಣ್ಣದ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ತುಂಬಿಸಿಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನಿಬ್ಬರು ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಮುಂದುವರಿಸಿದ್ದಾರೆ.

ಸೆ.29ರಂದು ಮಧ್ಯರಾತ್ರಿ ಸುಮಾರು 1.30ರ ವೇಳೆಗೆ ಅಪರಿಚಿತರು ಬಿಳಿ ಬಣ್ಣದ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಬಂದು ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಹಿಂಸಾತ್ಮಕವಾಗಿ ಎಳೆದು ಕಾರಿನಲ್ಲಿ ತುಂಬಿಸಿಕೊಂಡು ಹೋಗಿದ್ದರು. ಈ ದೃಶ್ಯ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು. ಸ್ಥಳೀಯರು ನೀಡಿದ ದೂರಿನ ಮೇರೆಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು, ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಎಚ್.ಡಿ. ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ್ ಅವರ ಉಸ್ತುವಾರಿಯಲ್ಲಿ ಕಾರ್ಯಾಚರಣೆ ನಡೆಸಿದರು. ಕೊಲ್ಲೂರು ಪೊಲೀಸ್ ಠಾಣೆಯ ಉಪನಿರೀಕ್ಷಕ ವಿನಯ್ ಎಂ. ಕೊರ್ಲಹಳ್ಳಿ ಹಾಗೂ ಸಿಬ್ಬಂದಿಗಳ ತಂಡ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದೆ.

ಬಂಧಿತ ಆರೋಪಿಯನ್ನು ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ತೋಟದಮನೆ ನಿವಾಸಿ ಮೊಹಮ್ಮದ್ ಸಿನಾನ್ (20), ಅಬೂಬಕ್ಕರ್ ಸಿದ್ದಿಕ್ ಅವರ ಪುತ್ರ ಎಂದು ಗುರುತಿಸಲಾಗಿದೆ. ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪ್ರಕರಣದಲ್ಲಿ ಇನ್ನೂ ಇಬ್ಬರು ಭಾಗಿಯಾಗಿರುವುದು ತಿಳಿದುಬಂದಿದ್ದು, ಅವರ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ. ಬಂಧಿತ ಮೊಹಮ್ಮದ್ ಸಿನಾನ್ ಕುಂದಾಪುರ ಉಪವಿಭಾಗದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಐದು ದನ ಕಳ್ಳತನ ಪ್ರಕರಣಗಳಲ್ಲಿಯೂ ಭಾಗಿಯಾಗಿದ್ದಾನೆ ಎಂದು ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ. ಈ ಸಂಬಂಧ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles