ಉಡುಪಿ: ಬೀಡಿ ಕಾರ್ಮಿಕರ ಕಲ್ಯಾಣ ಮಂಡಳಿ ರಾಜ್ಯದಿಂದ ಕೇಂದ್ರದ ಅಧೀನಕ್ಕೆ ಹೋಗಿರುವುದರಿಂದ ಕಾರ್ಮಿಕರು ಹಾಗೂ ಅವರ ಕುಟುಂಬಗಳು ಹಲವು ಸಮಸ್ಯೆಗಳನ್ನು ಎದುರಿಸುವಂತಾಗಿದೆ ಎಂದು ಕರ್ನಾಟಕ ರಾಜ್ಯ ಬೀಡಿ ಕಾರ್ಮಿಕರ ಫೆಡರೇಶನ್ ರಾಜ್ಯ ಅಧ್ಯಕ್ಷ ಕಾಮ್ರೇಡ್ ಜೆ. ಬಾಲಕೃಷ್ಣ ಶೆಟ್ಟಿ ಹೇಳಿದರು.

ಬನ್ನಂಜೆಯ ಶ್ರೀ ನಾರಾಯಣ ಗುರು ಸಭಾಂಗಣದಲ್ಲಿ ನಡೆದ ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು)ಯ 45ನೇ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಸಂಹಿತೆಗಳಿಂದ ಬೀಡಿ ಕಾರ್ಮಿಕರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಕಲ್ಯಾಣ ಮಂಡಳಿ ಕೇಂದ್ರದ ಅಧೀನಕ್ಕೆ ಹೋದ ಬಳಿಕ ಬೀಡಿ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ಸಮರ್ಪಕವಾಗಿ ದೊರೆಯುತ್ತಿಲ್ಲ. ಬೀಡಿ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ಹಾಗೂ ಡಿಸ್ಪೆನ್ಸರಿಗಳಲ್ಲಿ ಔಷಧಿಗಳು ಸಿಗುತ್ತಿಲ್ಲ. ಮನೆ ನಿರ್ಮಾಣ ಹಾಗೂ ಆರೋಗ್ಯಕ್ಕೆ ನೀಡಲಾಗುತ್ತಿದ್ದ ಸಹಾಯಧನ ಕೂಡ ಸಮರ್ಪಕವಾಗಿ ದೊರೆಯುತ್ತಿಲ್ಲ ಎಂದು ಅವರು ಆರೋಪಿಸಿದರು.

ಇನ್ನೊಂದೆಡೆ ರಾಜ್ಯ ಸರ್ಕಾರಗಳು ಬೀಡಿ ಕಾರ್ಮಿಕರ ವೇತನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳುತ್ತಿಲ್ಲ. ಬದಲಾಗಿ ಬೀಡಿ ಕಂಪನಿ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಳ್ಳುವ ಮೂಲಕ ಕಾರ್ಮಿಕರ ಹಿತಾಸಕ್ತಿಯನ್ನು ಕಡೆಗಣಿಸುತ್ತಿವೆ ಎಂದು ಅವರು ದೂರಿದರು. ಇದರಿಂದ ಬೀಡಿ ಕಾರ್ಮಿಕರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕುವಂತಾಗಿದೆ ಎಂದರು.

ಸಿಐಟಿಯು ಉಡುಪಿ ಜಿಲ್ಲಾ ಅಧ್ಯಕ್ಷ ಶಶಿಧರ್ ಗೊಲ್ಲ ಹಾಗೂ ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ ಫೆಡರೇಶನ್ ಪ್ರಧಾನ ಕಾರ್ಯದರ್ಶಿ ಕವಿರಾಜ್ ಎಸ್. ಕಾಂಚನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಜಿಲ್ಲಾ ಕೋಶಾಧಿಕಾರಿ ಬಲ್ಕೀಸ್, ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಅಧ್ಯಕ್ಷೆ ನಳಿನಿ ಎಸ್. ಸಭೆಯಲ್ಲಿ ಉಪಸ್ಥಿತರಿದ್ದರು. ಸಭೆಯ ಅಧ್ಯಕ್ಷತೆಯನ್ನು ನಳಿನಿ ಎಸ್. ವಹಿಸಿದ್ದರು. ಕಾರ್ಯದರ್ಶಿ ಉಮೇಶ್ ಕುಂದರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ಜ್ಯೋತಿ ವಂದಿಸಿದರು.



