ಉಡುಪಿ : ಮಕ್ಕಳ ಸರ್ವಾಂಗೀಣ ಅಭಿವೃದ್ಧಿ ಹಾಗೂ ರಕ್ಷಣೆಗೆ ಸರ್ಕಾರ ಜಾರಿಗೆ ತಂದಿರುವ ಹಕ್ಕುಗಳು, ನಿಯಮಗಳು ಮತ್ತು ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಮಕ್ಕಳ ಅಭಿವೃದ್ಧಿಗೆ ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಕರೆ ನೀಡಿದರು.

ಅವರು ಶುಕ್ರವಾರ ಮಣಿಪಾಲದ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ನಡೆದ ಆರ್ಟಿಇ ಕಾಯ್ದೆ 2009, ಪೋಕ್ಸೋ ಕಾಯ್ದೆ 2012, ಬಾಲ್ಯ ವಿವಾಹ ನಿಷೇಧ ಕಾಯ್ದೆ 2006 ಮತ್ತು ಬಾಲನ್ಯಾಯ ಕಾಯ್ದೆ 2015 ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ 1ರಿಂದ 10ನೇ ತರಗತಿವರೆಗೆ 1,59,731 ಮಕ್ಕಳು ಇದ್ದಾರೆ. ಪ್ರತಿಯೊಬ್ಬ ಮಕ್ಕಳಿಗೂ ಆಧಾರ್ ಸೀಡಿಂಗ್ ಮತ್ತು ಆಧಾರ್ ಮ್ಯಾಪಿಂಗ್ ಆಗಿರುವುದು ಕಡ್ಡಾಯವಾಗಿದ್ದು, ಇಲ್ಲದಿದ್ದರೆ ಭವಿಷ್ಯದಲ್ಲಿ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಆದ್ದರಿಂದ ಪ್ರತಿಯೊಬ್ಬ ಮಗುವಿಗೂ ಆಧಾರ್ ಕಾರ್ಡ್ ದೊರೆಯುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. 30 ದಿನಗಳ ಒಳಗೆ ಜಿಲ್ಲೆಯ ಎಲ್ಲಾ ಮಕ್ಕಳಿಗೂ ಆಧಾರ್ ಸೌಲಭ್ಯ ಒದಗಿಸಬೇಕು, ಇಲ್ಲವಾದಲ್ಲಿ ಸಂಬಂಧಿತ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸರ್ಕಾರಕ್ಕೆ ವರದಿ ನೀಡಲಾಗುವುದು ಎಂದು ಎಚ್ಚರಿಸಿದರು.

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ ಮಾತನಾಡಿ, ಎಲ್ಲಾ ಸರಕಾರಿ ಕಚೇರಿಗಳಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆಯನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಸುತ್ತೋಲೆ ಹೊರಡಿಸಿದ್ದರೂ ಬ್ರಹ್ಮಾವರ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ಸಂಖ್ಯೆ ಪ್ರದರ್ಶಿಸದಿರುವುದು ಕಂಡುಬಂದಿದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪರಿಶೀಲಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್. ಕಾದ್ರೊಳ್ಳಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.



