ಉಡುಪಿ : ಮಹಿಳೆಯರ ಸುರಕ್ಷತೆ, ಆರ್ಥಿಕ ಸಬಲೀಕರಣ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಿಸಿ, ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಮಾಜದ ದುರ್ಬಲ, ಶೋಷಿತ ಹಾಗೂ ಅಸಹಾಯಕ ಮಹಿಳೆಯರಿಗೆ ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಬಗ್ಗೆ ಸಮರ್ಪಕ ಅರಿವು ಮೂಡಿಸಬೇಕು. ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗುವಂತೆ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಚೇತನಾ, ಧನಶ್ರೀ, ಉದ್ಯೋಗಿನಿ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳ ಕುರಿತು ಅರ್ಹ ಫಲಾನುಭವಿಗಳಿಗೆ ಮಾಹಿತಿ ನೀಡಿ, ಹೆಚ್ಚಿನ ಸಂಖ್ಯೆಯಲ್ಲಿ ಯೋಜನೆಗಳ ಪ್ರಯೋಜನ ಪಡೆಯುವಂತೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಮಹಿಳೆಯರಿಗೆ ಕೆಲಸದ ಸ್ಥಳದಲ್ಲಿ ಸುರಕ್ಷತೆ ಕಲ್ಪಿಸಲು ಪ್ರತಿಯೊಂದು ಸಂಸ್ಥೆಯಲ್ಲೂ ಆಂತರಿಕ ದೂರು ಸಮಿತಿ ರಚಿಸುವುದು ಕಡ್ಡಾಯವಾಗಿದೆ. ಜಿಲ್ಲೆಯಲ್ಲಿ 3,149ಕ್ಕೂ ಹೆಚ್ಚು ಸಂಸ್ಥೆಗಳಿದ್ದರೂ ಕೇವಲ 789 ಸಂಸ್ಥೆಗಳಲ್ಲಿ ಮಾತ್ರ ಸಮಿತಿಗಳು ರಚನೆಯಾಗಿವೆ. ಉಳಿದ ಎಲ್ಲ ಸಂಸ್ಥೆಗಳಲ್ಲೂ ಶೀಘ್ರ ಸಮಿತಿಗಳನ್ನು ರಚಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಕೌಟುಂಬಿಕ ದೌರ್ಜನ್ಯ, ಮಾನಸಿಕ ಕಿರುಕುಳ ಸೇರಿದಂತೆ ವಿವಿಧ ಸಮಸ್ಯೆಗಳಿಂದ ಬಳಲುತ್ತಿರುವ ಮಹಿಳೆಯರಿಗೆ ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರ ಹಾಗೂ ಸಖಿ ಒನ್ ಸ್ಟಾಪ್ ಸೆಂಟರ್ ಮೂಲಕ ಕಾನೂನು, ವೈದ್ಯಕೀಯ ಮತ್ತು ಸಮಾಲೋಚನಾ ಸೇವೆಗಳನ್ನು ಪರಿಣಾಮಕಾರಿಯಾಗಿ ಒದಗಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಮಹಿಳೆಯರ ಸ್ವಾವಲಂಬನೆಗಾಗಿ ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ ನೀಡುವಂತೆಯೂ ಹೇಳಿದರು. ಹೆಣ್ಣು ಮಕ್ಕಳ ಶಿಕ್ಷಣ ಮತ್ತು ರಕ್ಷಣೆಗೆ ಜಾರಿಯಲ್ಲಿರುವ ಬೇಟಿ ಬಚಾವೋ-ಬೇಟಿ ಪಡಾವೋ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿ ಅರ್ಹ ಗರ್ಭಿಣಿಯರು ಹಾಗೂ ಬಾಣಂತಿಯರು ಸೌಲಭ್ಯ ಪಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಸಮಿತಿಗಳನ್ನು ಸಕ್ರಿಯಗೊಳಿಸಿ, ಯಾವುದೇ ಮಗು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು. ನಿರ್ಮಾಣ ಕಾಮಗಾರಿ ಸ್ಥಳಗಳಲ್ಲಿ ಬಾಲಕಾರ್ಮಿಕ ಪದ್ಧತಿ ತಡೆಗೆ ವಿಶೇಷ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ನಿತಿನ್ ವೈ. ರಾವ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರೇಮಮೂರ್ತಿ ಕೆ., ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಸಾಂತ್ವನ ಕೇಂದ್ರದ ಪ್ರತಿನಿಧಿಗಳು ಉಪಸ್ಥಿತರಿದ್ದರು.


