Wednesday, July 1, 2026

spot_img

ಮಾದಕ ವಸ್ತುಗಳ ಚಟುವಟಿಕೆ ಕಂಡುಬಂದರೆ ಕ್ಯೂಆರ್ ಕೋಡ್ ಮೂಲಕ ಮಾಹಿತಿ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.

ಉಡುಪಿ : ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಣಿಕೆ, ಮಾರಾಟ ಹಾಗೂ ಬಳಕೆಯನ್ನು ತಡೆಗಟ್ಟಲು ಪೊಲೀಸ್ ಇಲಾಖೆ ಅಭಿವೃದ್ಧಿಪಡಿಸಿರುವ ಕ್ಯೂಆರ್ ಕೋಡ್ ವ್ಯವಸ್ಥೆಯನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಕರೆ ನೀಡಿದರು. ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎನ್‌ಸಿಒಆರ್‌ಡಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಣಿಕೆ, ಮಾರಾಟ ಅಥವಾ ಸೇವನೆ ಬಗ್ಗೆ ಮಾಹಿತಿ ದೊರೆತರೆ ಸಾರ್ವಜನಿಕರು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಅನಾಮಧೇಯವಾಗಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬಹುದು. ಮಾಹಿತಿ ನೀಡಿದವರ ಗುರುತನ್ನು ಸಂಪೂರ್ಣ ಗೌಪ್ಯವಾಗಿಡಲಾಗುವುದು. ಜಿಲ್ಲೆಯನ್ನು ಮಾದಕ ವಸ್ತು ಮುಕ್ತಗೊಳಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಅವರು ಹೇಳಿದರು.

ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು, ಶೈಕ್ಷಣಿಕ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಕಾರ್ಮಿಕ ಸಂಘಟನೆಗಳು ಬಸ್ ನಿಲ್ದಾಣ, ಕೈಗಾರಿಕಾ ಪ್ರದೇಶ, ಸಿನಿಮಾ ಮಂದಿರ ಸೇರಿದಂತೆ ಸಾರ್ವಜನಿಕರು ಸುಲಭವಾಗಿ ಕಾಣುವ ಸ್ಥಳಗಳಲ್ಲಿ ಕ್ಯೂಆರ್ ಕೋಡ್ ಅಳವಡಿಸಿ ವ್ಯಾಪಕ ಪ್ರಚಾರ ನಡೆಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯ, ಮಾನಸಿಕ ಸ್ಥಿತಿ ಹಾಗೂ ಆರ್ಥಿಕ ಪರಿಸ್ಥಿತಿಯ ಮೇಲೆ ಗಂಭೀರ ದುಷ್ಪರಿಣಾಮ ಉಂಟಾಗುತ್ತದೆ. ವಿಶೇಷವಾಗಿ ಯುವ ಸಮುದಾಯ ವ್ಯಸನದತ್ತ ಆಕರ್ಷಿತವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆ ಹಾಗೂ ಕಾಲೇಜುಗಳಲ್ಲಿ ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಅಗತ್ಯವಿದೆ ಎಂದು ಅವರು ಹೇಳಿದರು.

ಕೃಷಿ, ತೋಟಗಾರಿಕೆ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಕೃಷಿ ಜಮೀನು, ತೋಟಗಳು ಮತ್ತು ಕಾಡಂಚಿನ ಪ್ರದೇಶಗಳಲ್ಲಿ ಅನಿರೀಕ್ಷಿತ ಪರಿಶೀಲನೆ ನಡೆಸಿ ಗಾಂಜಾ ಬೆಳೆ ಬೆಳೆಯುತ್ತಿರುವ ಬಗ್ಗೆ ನಿಗಾ ವಹಿಸಬೇಕು ಎಂದು ಸೂಚಿಸಿದರು. ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳ ಮೇಲೆ ನಿಗಾ ವಹಿಸಿ, ಮಾದಕ ವಸ್ತು ಸೇವನೆಯ ಬಗ್ಗೆ ಅನುಮಾನ ಬಂದಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಬೇಕು. ಪಾರ್ಸೆಲ್ ಸೇವೆಗಳ ಮೂಲಕ ಮಾದಕ ವಸ್ತು ಸಾಗಣೆ ನಡೆಯುವ ಸಾಧ್ಯತೆ ಇರುವುದರಿಂದ ಈ ಕುರಿತು ಕಟ್ಟುನಿಟ್ಟಿನ ನಿಗಾ ವಹಿಸುವಂತೆ ಸೂಚಿಸಿದ ಅವರು, ಹೊರರಾಜ್ಯಗಳಿಂದ ಬರುವ ಕಾರ್ಮಿಕರ ಮಾಹಿತಿ ಪರಿಶೀಲಿಸುವುದರ ಜೊತೆಗೆ ಕರಾವಳಿ ಕಾವಲು ಪಡೆ ಬೋಟ್‌ಗಳ ತಪಾಸಣೆಯನ್ನು ಮತ್ತಷ್ಟು ತೀವ್ರಗೊಳಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಸಹಾಯಕ ಆಯುಕ್ತೆ ರಶ್ಮಿ, ಅಪರ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್, ಪೌರಾಯುಕ್ತ ಮಹಾಂತೇಶ ಹಂಗರಗಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles