ಉಡುಪಿ: ಕಾರ್ಕಳ ತಾಲೂಕಿನ ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಕುಸಿದು ಬಿದ್ದು ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಮೃತ ಬಾಲಕಿಯನ್ನು ಬಾಗಲಕೋಟೆ ಮೂಲದ ಮೇಘನಾ (13) ಎಂದು ಗುರುತಿಸಲಾಗಿದೆ.

ಬುಧವಾರ ಬೆಳಗ್ಗೆ ಸುಮಾರು 6 ಗಂಟೆಗೆ ಬಾಲಕಿ ಏಕಾಏಕಿ ಮೂರ್ಛೆ ತಪ್ಪಿ ಕುಸಿದು ಬಿದ್ದಿದ್ದಾಳೆ ಎನ್ನಲಾಗಿದೆ. ಕೂಡಲೇ ಶಾಲಾ ಸಿಬ್ಬಂದಿ ಬಾಲಕಿಯನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಬಾಲಕಿಯನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಣಿಪಾಲಕ್ಕೆ ರವಾನಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಬಾಲಕಿಯ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣದ ಕುರಿತು ಮಾಹಿತಿ ದಾಖಲಾಗಿದೆ.


