ಉಡುಪಿ : ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ನಡೆದುಕೊಳ್ಳುತ್ತಿದ್ದು, ಕರ್ನಾಟಕ ವಿರೋಧಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ, ಅವರನ್ನು ಹುದ್ದೆಯಿಂದ ವಜಾಗೊಳಿಸುವಂತೆ ಉಡುಪಿ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡ ಬಣ) ಆಗ್ರಹಿಸಿದೆ.

ಎಸೆಸೆಲ್ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದ ರಾಜ್ಯ ಸರಕಾರದ ನಿರ್ಧಾರವನ್ನು ಮರು ಪರಿಶೀಲಿಸುವಂತೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವುದನ್ನು ಖಂಡಿಸಿ, ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಮಂಗಳವಾರ ಕರವೇ ವತಿಯಿಂದ ಧರಣಿ ನಡೆಯಿತು. ಈ ವೇಳೆ ಮಾತನಾಡಿದ ಜಿಲ್ಲಾ ಅಧ್ಯಕ್ಷ ಅ.ರಾ. ಪ್ರಭಾಕರ್ ಪೂಜಾರಿ, ರಾಜ್ಯಪಾಲರ ಈ ಕ್ರಮದ ಹಿಂದೆ ರಾಜ್ಯದಲ್ಲಿ ಹಿಂದಿ ಹೇರಿಕೆ ಮಾಡುವ ಹುನ್ನಾರವಿದೆ ಎಂದು ಆರೋಪಿಸಿದರು.

ಬೆಂಗಳೂರು ಸ್ಥಳೀಯ ಭಾಷೆಗಳ ಸಂರಕ್ಷಣಾ ಸಂಘ ಎಂಬ ಸಂಘಟನೆಯ ಮನವಿಯ ಆಧಾರದಲ್ಲಿ ರಾಜ್ಯಪಾಲರು ಸರ್ಕಾರಕ್ಕೆ ಪತ್ರ ಬರೆದಿದ್ದು, ಇದು ಅವರ ಕಾರ್ಯಪರಿಧಿಯನ್ನು ಮೀರಿ ಕನ್ನಡಿಗರ ಆಶೋತ್ತರಗಳಿಗೆ ವಿರುದ್ಧವಾಗಿದೆ. ಅವರು ಹಿಂದಿ ಪರ ಸಂಘಟನೆಗಳ ಪರವಾಗಿ ಕೆಲಸ ಮಾಡುತ್ತಿರುವಂತೆ ತೋರುತ್ತಿದ್ದು, ರಾಜ್ಯಪಾಲರಾಗಿ ಮುಂದುವರಿಯುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ ಎಂದು ಟೀಕಿಸಿದರು.

ರಾಜ್ಯಪಾಲರು ತಮ್ಮ ಸ್ವಂತ ರಾಜ್ಯವಾದ ಮಧ್ಯಪ್ರದೇಶದಲ್ಲಿ ಮೊದಲಿಗೆ ಮೂರನೇ ಭಾಷೆಯಾಗಿ ಕನ್ನಡವನ್ನು ಕಡ್ಡಾಯಗೊಳಿಸಲು ಕ್ರಮ ಕೈಗೊಳ್ಳಬೇಕು. ನಮ್ಮ ಪ್ರಾಣ ಹೋದರೂ ಕನ್ನಡ ಅಸ್ಮಿತೆಯನ್ನು ಉಳಿಸಿಕೊಳ್ಳುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತ ಮನವಿಯನ್ನು ಜಿಲ್ಲಾಡಳಿತದ ಮೂಲಕ ಕೇಂದ್ರ ಸರಕಾರಕ್ಕೆ ಸಲ್ಲಿಸಲಾಯಿತು. ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮನವಿ ಸ್ವೀಕರಿಸಿದರು.

ಧರಣಿಯಲ್ಲಿ ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ಬರ್ಸ್ರು, ಉಪಾಧ್ಯಕ್ಷ ಶಹಾಬುದ್ದೀನ್, ನಗರ ಅಧ್ಯಕ್ಷ ಅಜರುದ್ಧೀನ್, ಸಾಮಾಜಿಕ ಜಾಲತಾಣ ಸಂಚಾಲಕ ಪುರುಷೋತ್ತಮ ಪೂಜಾರಿ, ಮಹಿಳಾ ಘಟಕದ ಪ್ರಮುಖರಾದ ಅಶ್ವಿನಿ ನಾಯಕ್, ಅನೂಷಾ ಆಚಾರ್ಯ, ಗೀತಾ ಪೂಜಾರಿ, ಸುನಂದಾ ಕೋಟ್ಯಾನ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.



