Friday, October 30, 2026

spot_img

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ವಹಿಸಿ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನಗಳಿಂದ ಟೋಲ್ ಸಂಗ್ರಹಿಸುವ ಗುತ್ತಿಗೆದಾರರು, ಅದಕ್ಕೆ ಪ್ರತಿಯಾಗಿ ವಾಹನಗಳ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅಗತ್ಯವಾದ ವೈಜ್ಞಾನಿಕ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳಬೇಕು. ಅಲ್ಲದೆ, ಹೆದ್ದಾರಿಗಳ ನಿರ್ವಹಣೆಯನ್ನು ಕಾಲಕಾಲಕ್ಕೆ ಸಮರ್ಪಕವಾಗಿ ಮಾಡಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ-66ರ ಕೋಟ, ಪಡುಬಿದ್ರೆ, ತೆಕ್ಕಟ್ಟೆ ಸೇರಿದಂತೆ ವಿವಿಧೆಡೆ ಸಂಭವಿಸುತ್ತಿರುವ ಸರಣಿ ಅಪಘಾತಗಳ ಕುರಿತು ಚರ್ಚಿಸಲು ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಾವು-ನೋವುಗಳು ಸಂಭವಿಸುತ್ತಿವೆ. ಗುತ್ತಿಗೆದಾರರು ಟೋಲ್ ಸಂಗ್ರಹಿಸುವುದನ್ನೇ ತಮ್ಮ ಮುಖ್ಯ ಗುರಿಯಾಗಿಸಿಕೊಳ್ಳದೆ, ನಿಯಮಾನುಸಾರ ಹೆದ್ದಾರಿಗಳ ನಿರ್ವಹಣೆ ಮಾಡಬೇಕು. ಅಪಘಾತಗಳನ್ನು ಕಡಿಮೆ ಮಾಡಲು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಹೆದ್ದಾರಿಯ ನಿರ್ವಹಣೆಯಲ್ಲಿನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದರೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಟೋಲ್ ಗುತ್ತಿಗೆ ನೀಡುವ ಸಂದರ್ಭದಲ್ಲಿಯೇ ಗುತ್ತಿಗೆದಾರರು ನಿರ್ವಹಿಸಬೇಕಾದ ಜವಾಬ್ದಾರಿಗಳನ್ನು ಸ್ಪಷ್ಟವಾಗಿ ತಿಳಿಸಲಾಗುತ್ತದೆ. ಆದರೂ ಜಿಲ್ಲೆಯಲ್ಲಿ ಸರಕಾರದ ಮಾರ್ಗಸೂಚಿಯಂತೆ ರಾಷ್ಟ್ರೀಯ ಹೆದ್ದಾರಿಗಳ ನಿರ್ವಹಣೆ ಸಮರ್ಪಕವಾಗಿ ನಡೆಯುತ್ತಿಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ಸಾರ್ವಜನಿಕರು ಟೋಲ್ ಪಾವತಿಸದಿರುವ ಸಾಧ್ಯತೆಯೂ ಇದೆ. ಈ ಬಗ್ಗೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದರು.

ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಒಟ್ಟು 22 ಅಪಘಾತ ಕಪ್ಪುಚುಕ್ಕೆ ಪ್ರದೇಶಗಳನ್ನು ಗುರುತಿಸಲಾಗಿದೆ. ಈ ಸ್ಥಳಗಳು ಸೇರಿದಂತೆ ಪ್ರಮುಖ ಜಂಕ್ಷನ್‌ಗಳಲ್ಲಿ ದಾರಿದೀಪ, ಸೂಚನಾ ಫಲಕ, ಬ್ಯಾರಿಕೇಡ್, ಬ್ಲಿಂಕರ್‌ಗಳ ಅಳವಡಿಕೆ ಸೇರಿದಂತೆ ಅಗತ್ಯ ವೈಜ್ಞಾನಿಕ ಸುರಕ್ಷತಾ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ ಅಪಘಾತ ಮುಕ್ತ ವಲಯಗಳನ್ನಾಗಿ ರೂಪಿಸಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಅಭಿಯಂತರರು ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು. ಅಂಬಾಗಿಲಿನಿಂದ ಎಲ್.ವಿ.ಟಿ.ವರೆಗಿನ ಸರ್ವೀಸ್ ರಸ್ತೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಮರಗಳ ತೆರವು ಹಾಗೂ ಚರಂಡಿ ನಿರ್ಮಾಣ ಕಾರ್ಯ ಆರಂಭವಾಗಿದೆ. ಈ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಅಂಬಾಗಿಲು ಪ್ರಮುಖ ಜಂಕ್ಷನ್ ಆಗಿರುವುದರಿಂದ ವಾಹನ ದಟ್ಟಣೆಯಿಂದ ಅಪಘಾತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು.

ನಿಟ್ಟೂರು, ತೆಕ್ಕಟ್ಟೆ, ಕುಂಭಾಶಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ಕೈಗೆತ್ತಿಕೊಂಡಿರುವ ಸರ್ವೀಸ್ ರಸ್ತೆ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು. ಈ ಪ್ರದೇಶಗಳಲ್ಲಿ ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿರುವುದರಿಂದ ಕಾಮಗಾರಿಗಳಿಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.

ಕಲ್ಯಾಣಪುರ-ಸಂತೆಕಟ್ಟೆ ಅಂಡರ್‌ಪಾಸ್‌ನಲ್ಲಿ ಅಳವಡಿಸಿರುವ ಬೀದಿ ದೀಪಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇದರಿಂದ ರಾತ್ರಿ ವೇಳೆ ಸಂಚರಿಸುವ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಮೆಸ್ಕಾಂ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ರಾತ್ರಿ ವೇಳೆ ನಿರಂತರವಾಗಿ ದೀಪಗಳು ಉರಿಯುವಂತೆ ನೋಡಿಕೊಳ್ಳಬೇಕು ಎಂದರು. ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಿಂದ 20 ಕಿ.ಮೀ. ವ್ಯಾಪ್ತಿಯೊಳಗೆ ವಾಸಿಸುವ ಸ್ಥಳೀಯ ನಿವಾಸಿಗಳಿಗೆ ನವೆಂಬರ್ 1ರಿಂದ ರಿಯಾಯಿತಿ ದರದಲ್ಲಿ ಸ್ಥಳೀಯ ಫಾಸ್ಟ್‌ಟ್ಯಾಗ್ ನೀಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಗುತ್ತಿಗೆದಾರರು ಅಗತ್ಯ ಕ್ರಮ ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಸೂಚಿಸಿದರು.

ತೆಂಕ ಎರ್ಮಾಳಿನಲ್ಲಿ ನಿರ್ಮಾಣವಾಗುತ್ತಿರುವ ಸ್ಕೈವಾಕ್ ಕಾಮಗಾರಿಗೆ ಸ್ಥಳೀಯರಿಂದ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕಾಮಗಾರಿಯನ್ನು ಸ್ಥಗಿತಗೊಳಿಸಬೇಕು. ಅಂಬಾಗಿಲು, ಬ್ರಹ್ಮಾವರದ ಮಹೇಶ್ ಆಸ್ಪತ್ರೆ ಸೇರಿದಂತೆ ಜನದಟ್ಟಣೆ ಇರುವ ಅಗತ್ಯ ಸ್ಥಳಗಳಲ್ಲಿ ಸ್ಕೈವಾಕ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು. ಕೇರಳ ಮಾದರಿಯಲ್ಲಿ ಕುಂದಾಪುರದಿಂದ ತಲಪಾಡಿವರೆಗೆ ಅಪಘಾತ ರಹಿತ ರಸ್ತೆ ನಿರ್ಮಿಸುವ ನಿಟ್ಟಿನಲ್ಲಿ ಸಮಗ್ರ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲಾಗುತ್ತಿದೆ ಎಂದರು.

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಗತ್ಯವಾದ ರಸ್ತೆ ಸೌಲಭ್ಯಗಳಿಲ್ಲದಿದ್ದರೆ ಸ್ಥಳೀಯ ಜನಪ್ರತಿನಿಧಿಗಳ ವಿರುದ್ಧ ಜನರು ಅಸಮಾಧಾನ ವ್ಯಕ್ತಪಡಿಸುತ್ತಾರೆ. ಪಡುಬಿದ್ರೆಯಲ್ಲಿ ವಾಹನ ಸಂಚಾರದ ದಟ್ಟಣೆಯಿಂದ ಅಪಘಾತಗಳು ಹೆಚ್ಚುತ್ತಿದ್ದು, ಸಾವು-ನೋವಿನ ಪ್ರಕರಣಗಳೂ ದಿನೇದಿನೇ ಏರಿಕೆಯಾಗುತ್ತಿವೆ. ಇಲ್ಲಿ ಮೇಲ್ಸೇತುವೆ ಅಥವಾ ಅಂಡರ್‌ಪಾಸ್ ನಿರ್ಮಾಣಕ್ಕೆ ಆದ್ಯತೆ ನೀಡಿದರೆ ಅಪಘಾತಗಳನ್ನು ತಡೆಯಲು ಸಾಧ್ಯವಾಗಬಹುದು ಎಂದರು. ಶಾಸಕ ಯಶ್‌ಪಾಲ್ ಎ. ಸುವರ್ಣ ಮಾತನಾಡಿ, ಬಲಾಯಿಪಾದೆಯಿಂದ ಕೊರಂಗ್ರಪಾಡಿವರೆಗೆ ಸರ್ವೀಸ್ ರಸ್ತೆ ನಿರ್ಮಾಣ ಮಾಡಬೇಕು. ಅಪಘಾತ ಸಂಭವಿಸುವ ಸಾಧ್ಯತೆ ಇರುವ ಪ್ರದೇಶಗಳಲ್ಲಿ ಅಗತ್ಯವಿರುವ ಎಲ್ಲ ರಸ್ತೆ ಸುರಕ್ಷತಾ ಮೂಲಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಡಿಎಫ್‌ಒ ರುಥ್ರೇನ್ ಪಿ., ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಸಹಾಯಕ ಆಯುಕ್ತ ಮಹೇಶ್ ಪಿ.ಎಸ್., ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ ಜಾವೇದ್ ಆಜ್ಮಿ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಗುತ್ತಿಗೆದಾರರು ಹಾಗೂ ಅಭಿಯಂತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles