ಮಣಿಪಾಲ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಉಡುಪಿ ಜಿಲ್ಲೆ ಹಾಗೂ ಸಮುದಾಯ ವೈದ್ಯಕೀಯ ವಿಭಾಗ, ಕಸ್ತೂರ್ಬಾ ಮೆಡಿಕಲ್ ಕಾಲೇಜ್, ಮಾಹೆ ಮಣಿಪಾಲ ಇವರ ಸಹಯೋಗದೊಂದಿಗೆ ಪ್ರಸೂತಿ ತಜ್ಞರಿಗೆ ಹಾಗೂ ವೈದ್ಯಾಧಿಕಾರಿಗಳಿಗೆ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯದ ಸಮಗ್ರ ಅಧ್ಯಯನದ ಕುರಿತು ಒಂದು ದಿನದ ಕಾರ್ಯಗಾರವು ಕೆ.ಎಂ.ಸಿ. ಮಣಿಪಾಲದ ಡಾ. ಟಿ.ಎಂ.ಎ. ಪೈ ಆಡಿಟೋರಿಯಂನಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ, ಅವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಜಿಲ್ಲೆಯಲ್ಲಿ ತಾಯಿ ಹಾಗೂ ಮಕ್ಕಳ ಸಾವು ಇಳಿಮುಖವಾಗುತ್ತಿದೆ. ಪ್ರತೀ ತಾಯಿ ಹಾಗೂ ಮಗುವಿನ ಸಾವುಗಳನ್ನು ತಡೆಯಲು ಸರ್ವ ಪ್ರಯತ್ನಗಳನ್ನು ಮಾಡಬೇಕಿದೆ ಎಂದು ಸಲಹೆ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಉಡುಪಿ ಜಿಲ್ಲೆಯು ಆರೋಗ್ಯ ವ್ಯವಸ್ಥೆಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಆದರೆ ಪ್ರತೀ ಜಿಲ್ಲೆಯಲ್ಲಿ ನಡೆಯುತ್ತಿರುವ ಸಿಸೇರಿಯನ್ ಡೆಲಿವರಿಗಳ ಬಗ್ಗೆ ವೈಜ್ಞಾನಿಕ ಅಧ್ಯಯನ ನಡೆಸಿ ನೈಜ ಅಗತ್ಯಗಳ ಬಗ್ಗೆ ಹೆಚ್ಚು ತಿಳುವಳಿಕೆ ನೀಡಬೇಕಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಮಾಹೆ ಮಣಿಪಾಲ ಆರೋಗ್ಯ ವಿಜ್ಞಾನ ಸಹ ಉಪ ಕುಲಪತಿ ಡಾ. ಶರತ್ ಕೆ. ರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಕಸ್ತೂರ್ಬಾ ಸಮೂಹ ಆಸ್ಪತ್ರೆಗಳು ಹಾಗೂ ಸಂಸ್ಥೆಯ ಗ್ರಾಮೀಣ ಆರೋಗ್ಯ ಕೇಂದ್ರಗಳ ಮೂಲಕ ತಾಯಿ ಮಕ್ಕಳ ಮರಣ ಪ್ರಮಾಣ ತಡೆಯಲು ನೀಡುತ್ತಿರುವ ಹಲವಾರು ದಶಕಗಳ ನಿರಂತರ ಸಹಕಾರಗಳ ಬಗ್ಗೆ ವಿವರಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರತ್ನ, ಕೆ.ಎಂ.ಸಿ. ಮಣಿಪಾಲ ಡೀನ್ ಡಾ. ಪದ್ಮರಾಜ್ ಹೆಗ್ಡೆ, ಕಾರ್ಯಕ್ರಮದ ಕರ್ನಾಟಕ ವೈದ್ಯಕೀಯ ಪರಿಷತ್ತಿನ ವೀಕ್ಷಕರಾದ ಡಾ. ಪ್ರೇಮಾನಂದ, ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ, ಮಣಿಪಾಲ ಕೆ.ಎಂ.ಸಿ. ಸಮುದಾಯ ವೈದ್ಯಕೀಯ ವಿಭಾಗ ವಿಭಾಗ ಮುಖ್ಯಸ್ಥ ಡಾ. ಅಶ್ವಿನಿ ಕುಮಾರ್, ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಅಧಿಕಾರಿ ಡಾ. ಜ್ಯೋತ್ಸ್ನಾ ಬಿಕೆ ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಕಸ್ತೂರ್ಬಾ ಆಸ್ಪತ್ರೆಯ 10 ಜನ ತಜ್ಞ ವೈದ್ಯರು ಹೆರಿಗೆ ಸಮಯದಲ್ಲಿ ಮಹಿಳೆ ಹಾಗೂ ಮಗುವಿನ ಆರೋಗ್ಯದಲ್ಲಾಗಬಹುದಾದ ಕ್ಲಿಷ್ಟಕರ ಸಂದರ್ಭಗಳ ನಿರ್ವಹಣೆ ಹಾಗೂ ಅವರ ಆರೋಗ್ಯ ರಕ್ಷಣೆ, ಸುಧಾರಣೆ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಗಾರದಲ್ಲಿ ಸುಮಾರು 207 ತಜ್ಞ ವೈದ್ಯರು, ಖಾಸಗಿ, ಸರಕಾರಿ ವೈದ್ಯರುಗಳು ಹಾಗೂ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ತಾಲೂಕು ಆರೋಗ್ಯ ಅಧಿಕಾರಿಗಳು ಹಾಗೂ ಕೆ.ಎಂ.ಸಿ. ಮಣಿಪಾಲದ ಸಿಬ್ಬಂದಿಗಳು ಭಾಗವಹಿಸಿದ್ದರು.