ಉಡುಪಿ : ಸೆ.18ರಂದು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಬೇಕು ಎಂದು ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.

ತುಳು ಕರಾವಳಿಯ ಆಚಾರ–ವಿಚಾರ, ದೈವಾರಾಧನೆ ಹಾಗೂ ಸಂಸ್ಕೃತಿಯ ಜೀವಾಳವಾಗಿದ್ದು, ಈ ಬೇಡಿಕೆ ದಶಕಗಳದ್ದಾಗಿದೆ. ಹಿಂದಿನ ಬಿಜೆಪಿ ಸರ್ಕಾರ ಡಾ. ಎಂ. ಮೋಹನ್ ಆಳ್ವ ಅಧ್ಯಕ್ಷತೆಯಲ್ಲಿ ರಚಿಸಿದ್ದ ಸಮಿತಿ, ತುಳುವಿಗೆ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಲು ಕಾನೂನು ಹಾಗೂ ಸಾಂವಿಧಾನಿಕವಾಗಿ ಯಾವುದೇ ಅಡೆತಡೆಗಳಿಲ್ಲ ಎಂದು ವರದಿ ನೀಡಿದೆ ಎಂದು ಅವರು ತಿಳಿಸಿದ್ದಾರೆ.

ಆಡಳಿತಾತ್ಮಕ ಸಿದ್ಧತೆಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಸೆ.18ರ ಸಂಪುಟ ಸಭೆಯಲ್ಲಿ ಮೋಹನ್ ಆಳ್ವ ಸಮಿತಿಯ ವರದಿಯನ್ನು ಅನುಷ್ಠಾನಗೊಳಿಸಿ ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಬೇಕು. ಸಂಪುಟ ಸಭೆ ಕೇವಲ ಔಪಚಾರಿಕತೆ ಹಾಗೂ ಘೋಷಣೆಗಳಿಗೆ ಸೀಮಿತವಾಗದೆ ಕರಾವಳಿ ಜನರ ಬಹುಕಾಲದ ಬೇಡಿಕೆಯನ್ನು ಈಡೇರಿಸಬೇಕು ಎಂದು ಸುನಿಲ್ ಕುಮಾರ್ ಒತ್ತಾಯಿಸಿದ್ದಾರೆ.


