Thursday, May 28, 2026

spot_img

ಸಚಿವ ಸಂಪುಟದಲ್ಲಿ ಮಂಜುನಾಥ್ ಭಂಡಾರಿಗೆ ಸ್ಥಾನ ನೀಡಲಿ: ಯುವ ಕಾಂಗ್ರೆಸ್ ಆಗ್ರಹ

ಉಡುಪಿ : ರಾಜ್ಯ ಸಚಿವ ಸಂಪುಟ ಪುನರ್‌ರಚನೆ ವೇಳೆ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಇಚ್ಛಿತಾರ್ಥ್ ಶೆಟ್ಟಿ ಆಗ್ರಹಿಸಿದರು. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಜುನಾಥ್ ಭಂಡಾರಿ ಅವರು ನಾಲ್ಕು ದಶಕಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿಯುತ್ತಿದ್ದು, ಪಕ್ಷಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ರಾಜ್ಯದ ವಿವಿಧ ಮಂತ್ರಿಗಳೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ಅವರು ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಾಯಕರು.

1982ರಲ್ಲಿ ಎನ್‌ಎಸ್‌ಯುಐ ಜಿಲ್ಲಾ ಅಧ್ಯಕ್ಷರಾಗಿ ರಾಜಕೀಯ ಜೀವನ ಆರಂಭಿಸಿದ ಮಂಜುನಾಥ್ ಭಂಡಾರಿ ಅವರು, ಬಳಿಕ ಯುವ ಕಾಂಗ್ರೆಸ್, ಕೆಪಿಸಿಸಿ ಹಾಗೂ ಎಐಸಿಸಿಯಲ್ಲಿ ವಿವಿಧ ಹುದ್ದೆಗಳನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ ಎಂದು ಶ್ಲಾಘಿಸಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಸಂಸತ್ ಚುನಾವಣೆಗೆ ಸ್ಪರ್ಧಿಸಲು ಪಕ್ಷ ಸೂಚಿಸಿದ ಸಂದರ್ಭದಲ್ಲೂ ಪಕ್ಷದ ಹಿತದೃಷ್ಟಿಯಿಂದ ಕಾರ್ಯನಿರ್ವಹಿಸಿ ಸಂಘಟನಾ ಬಲವರ್ಧನೆಗೆ ಶ್ರಮಿಸಿದ್ದಾರೆ. ಪ್ರಸ್ತುತ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸುತ್ತಿರುವ ಅವರು, ಕಾರ್ಯಕರ್ತರಿಗೆ ಪ್ರೇರಣೆ ನೀಡುವ ಕೆಲಸ ಮಾಡುತ್ತಿದ್ದಾರೆ. ವಿಶೇಷವಾಗಿ ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡುತ್ತಿದ್ದು, ತಾವು ಬೆಳೆಯುವ ಜೊತೆಗೆ ಇತರರನ್ನೂ ಬೆಳೆಸುವ ಗುಣ ಹೊಂದಿದ್ದಾರೆ. ಐದು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲು ಕಂಡಿರುವ ಉಡುಪಿ ಜಿಲ್ಲೆಯಲ್ಲಿ ಪಕ್ಷಕ್ಕೆ ಹೊಸ ಚೈತನ್ಯ ತುಂಬಲು ಮಂಜುನಾಥ್ ಭಂಡಾರಿ ಅವರಿಗೆ ಸಚಿವ ಸ್ಥಾನ ನೀಡುವುದು ಅಗತ್ಯ. ಅವರು ಜಿಲ್ಲಾ ಉಸ್ತುವಾರಿ ಸಚಿವರಾದರೆ ಕಾರ್ಯಕರ್ತರಿಗೂ ಶಕ್ತಿ ಸಿಗಲಿದೆ ಎಂದು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯಿಂದ ಯು.ಟಿ. ಖಾದರ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆ ಇರುವುದರಿಂದ, ಉಡುಪಿ ಜಿಲ್ಲೆಯಿಂದ ಮಂಜುನಾಥ್ ಭಂಡಾರಿ ಅವರನ್ನು ಪರಿಗಣಿಸಬೇಕು ಎಂದು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಕರ್ಜೆ, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಮಹಮ್ಮದ್ ಸಲಾಂ, ನಟರಾಜ್ ಹೊಳ್ಳ, ಕುಂದಾಪುರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಭಿಜಿತ್ ಪೂಜಾರಿ ಹೇರಿಕುದ್ರು, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮುನಾಫ್ ಕೋಡಿ, ರಕ್ಷಿತ್ ಶೆಟ್ಟಿ ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles