ಉಡುಪಿ : ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ ಎಲ್ಲ ಕಲ್ಯಾಣ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಕಾಲದಲ್ಲಿ ತಲುಪುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಸಮುದಾಯದ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ ಎಂ. ಸೂಚಿಸಿದರು.

ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಭೋವಿ (ವಡ್ಡರ) ಅಭಿವೃದ್ಧಿ ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ನಿಗಮದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಹಾಗೂ ಭೋವಿ ಸಮುದಾಯದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ನಡೆದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ಜನಸಾಮಾನ್ಯರಿಗಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿರುವುದರ ಜೊತೆಗೆ ಭೋವಿ ಸಮುದಾಯದ ಅಭಿವೃದ್ಧಿಗಾಗಿ ಪ್ರತ್ಯೇಕ ಆರು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಗಳು ಅರ್ಹ ಬಡವರು, ನಿರ್ಗತಿಕರು ಸೇರಿದಂತೆ ಸಮಾಜದ ಕಟ್ಟಕಡೆಯ ಭೋವಿ ವ್ಯಕ್ತಿಗೂ ತಲುಪಿಸುವುದು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ಲೋಪವಾಗದಂತೆ ಕ್ರಮ ಕೈಗೊಳ್ಳಬೇಕು ಎಂದರು.

ಅತ್ಯಂತ ಹಿಂದುಳಿದ ಭೋವಿ ಸಮುದಾಯಕ್ಕೆ ಅಗತ್ಯ ನೆರವು ದೊರೆಯುವ ಮೂಲಕ ಅವರ ಬೇಡಿಕೆಗಳು ಈಡೇರಬೇಕು. ವಿವಿಧ ಪ್ರದೇಶಗಳಿಂದ ಬಂದು ನೆಲೆಸಿ ತಮ್ಮ ಕುಲಕಸುಬುಗಳ ಮೂಲಕ ಜೀವನ ಸಾಗಿಸುತ್ತಿರುವ ಸಮುದಾಯದವರು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಮುಂದೆ ಬರಲು ಪರಿಶಿಷ್ಟ ಜಾತಿ ಪ್ರಮಾಣಪತ್ರ ಅತ್ಯಗತ್ಯವಾಗಿದೆ. ಮೂಲ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವ ಅರ್ಹರಿಗೆ ಕಂದಾಯ ಇಲಾಖೆಯ ಅಧಿಕಾರಿಗಳು ಮುತುವರ್ಜಿ ವಹಿಸಿ ಪರಿಶೀಲನೆ ನಡೆಸಿ, ಸಮನ್ವಯದೊಂದಿಗೆ ಪ್ರಮಾಣಪತ್ರ ದೊರೆಯುವಂತೆ ಮಾಡಬೇಕು ಎಂದು ಹೇಳಿದರು. ಭೋವಿ ಸಮುದಾಯದ ಮೂಲ ವೃತ್ತಿಯಾಗಿರುವ ಕಲ್ಲು ಒಡೆಯುವ ಉದ್ಯೋಗವನ್ನು ಮುಂದುವರಿಸಲು ಅನುಕೂಲವಾಗುವಂತೆ ಸರ್ಕಾರ ಎರಡು ಎಕರೆವರೆಗೆ ಕಲ್ಲು ಕೋರೆಯನ್ನು ನೀಡಲು ಅವಕಾಶ ಕಲ್ಪಿಸಿದೆ. ಉಡುಪಿ ಜಿಲ್ಲೆಯಲ್ಲಿ ಈಗಾಗಲೇ 21 ಮಂದಿ ಅರ್ಜಿ ಸಲ್ಲಿಸಿದ್ದು, ಈ ಪೈಕಿ ಇಬ್ಬರಿಗೆ ಮಾತ್ರ ಇದರ ಪ್ರಯೋಜನ ದೊರೆತಿದೆ. ಉಳಿದ ಅರ್ಜಿದಾರರು ಅರಣ್ಯ ಹಾಗೂ ಕಂದಾಯ ಇಲಾಖೆಯಿಂದ ನಿರಪೇಕ್ಷಣಾ ಪತ್ರ ಪಡೆಯಬೇಕಿದ್ದು, ಇದರಲ್ಲಿ ವಿಳಂಬವಾಗುತ್ತಿದೆ.

ಗಣಿ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಸೂಕ್ತ ಅನುಸರಣೆ ನಡೆಸಿ, ನಿಯಮಾನುಸಾರ ಅರ್ಹರಿಗೆ ಮುಂದಿನ ಎರಡು ತಿಂಗಳೊಳಗೆ ಕಲ್ಲು ಕೋರೆಯ ಸೌಲಭ್ಯ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ರಾಮಪ್ಪ ಎಂ. ಸೂಚಿಸಿದರು. ಭೋವಿ ಸಮುದಾಯದವರು ಕಟ್ಟಡ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕಾರ್ಮಿಕ ಇಲಾಖೆಯಲ್ಲಿ ಕಾರ್ಮಿಕರ ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸುವ ಅರ್ಹರಿಗೆ ಪರಿಶೀಲನೆ ಬಳಿಕ ಗುರುತಿನ ಚೀಟಿ ನೀಡಬೇಕು ಎಂದರು.

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಮಾತನಾಡಿ, ಭೋವಿ ಸಮುದಾಯ ಮುಖ್ಯವಾಹಿನಿಗೆ ಬರಲು ಸರ್ಕಾರ ಮೂಲಸೌಕರ್ಯ ಹಾಗೂ ಆರ್ಥಿಕ ನೆರವು ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸುತ್ತಿದೆ. ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸಹ ಅವಕಾಶ ಕಲ್ಪಿಸಲಾಗಿದೆ. ಸಮುದಾಯದವರು ಈ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಅಭಿವೃದ್ಧಿಯತ್ತ ಸಾಗಬೇಕು ಎಂದರು.

ಶಾಸಕ ವಿ. ಸುನಿಲ್ ಕುಮಾರ್ ಮಾತನಾಡಿ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭೋವಿ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಸಮುದಾಯದವರಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡುವಲ್ಲಿ ಕಂದಾಯ ಇಲಾಖೆಯಲ್ಲಿ ವಿಳಂಬವಾಗುತ್ತಿದೆ. ಶಿಕ್ಷಣ ಹಾಗೂ ಉದ್ಯೋಗಕ್ಕೆ ಎಸ್ಸಿ ಪ್ರಮಾಣಪತ್ರ ಅತ್ಯಗತ್ಯವಾಗಿರುವುದರಿಂದ ಸರ್ಕಾರದ ಚೌಕಟ್ಟಿನಲ್ಲಿ ಸಭೆ ನಡೆಸಿ ಸ್ಪಷ್ಟ ತೀರ್ಮಾನ ಕೈಗೊಂಡು ಸಮುದಾಯಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಚಂದ್ರಾ ನಾಯಕ್ ಅವರು ನಿಗಮದಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳು ಹಾಗೂ ಸಮುದಾಯದವರು ಪರಿಶಿಷ್ಟ ಜಾತಿ ಪ್ರಮಾಣಪತ್ರ ಪಡೆಯುವಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ವಿವರಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಶಾಸಕರಾದ ಯಶ್ಪಾಲ್ ಎ. ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಶೆಟ್ಟಿ ಗಂಟಿಹೊಳೆ, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್. ಕಾದ್ರೊಳ್ಳಿ, ಕುಂದಾಪುರ ಸಹಾಯಕ ಕಮಿಷನರ್ ರಶ್ಮಿ, ದಕ್ಷಿಣ ಕನ್ನಡ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಹೇಮಲತಾ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಶಂಕರ ಮುಲ್ಲಾರ್, ವಿವಿಧ ಇಲಾಖೆಗಳ ಅಧಿಕಾರಿಗಳು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ತಹಶೀಲ್ದಾರ್ಗಳು, ಭೋವಿ ಸಮಾಜದ ಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು. ಉಡುಪಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು ಸ್ವಾಗತಿಸಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ನಿರೂಪಿಸಿ ವಂದಿಸಿದರು.


