ಉಡುಪಿ: ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ಕರಾವಳಿಯಲ್ಲಿ ಭ್ರಷ್ಟಾಚಾರಕ್ಕೆ ಮೂಲ ಕಾರಣರಾಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ ಆರೋಪಿಸಿದರು.

ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುನಿಲ್ ಕುಮಾರ್ ಅವರು ಧರ್ಮ ಮತ್ತು ದೇವರ ಹೆಸರಿನಲ್ಲಿ ಮತ ಕೇಳುತ್ತಿದ್ದು, ಕ್ಷೇತ್ರದ ಅಭಿವೃದ್ಧಿಗೆ ಯಾವುದೇ ಗಮನ ಹರಿಸುತ್ತಿಲ್ಲ ಎಂದು ಟೀಕಿಸಿದರು. ರಾಜ್ಯ ಸರ್ಕಾರದ ವಿರುದ್ಧ ಅನಗತ್ಯ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಮುಂಡ್ಲಿ ಅಣೆಕಟ್ಟಿನ ಗೇಟ್ ಉಪಕರಣಗಳ ಕಳ್ಳತನ ಪ್ರಕರಣದಲ್ಲಿ ಸುನಿಲ್ ಕುಮಾರ್ ಅವರ ಬೆಂಬಲಿಗನೊಬ್ಬ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಆದರೆ ಈ ವಿಷಯವನ್ನು ಸಾರ್ವಜನಿಕವಾಗಿ ಬಹಿರಂಗವಾಗದಂತೆ ಮುಚ್ಚಿಡಲಾಗಿದೆ ಎಂದು ಆರೋಪಿಸಿದರು. ಈ ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಕಾರ್ಕಳ ಕ್ಷೇತ್ರದ ರಸ್ತೆ ಮತ್ತು ಸೇತುವೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ರಾಜ್ಯ ಸರ್ಕಾರ ಈಗಾಗಲೇ 110 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. ಆದರೂ ಸುನಿಲ್ ಕುಮಾರ್ ಅವರು ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ತಪ್ಪು ಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಿನಾಥ್ ಭಟ್, ಕಾರ್ಕಳ-ಹೆಬ್ರಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಭಾನುಬಾಸ್ಕರ್, ಪ್ರಸನ್ನ ಶೆಟ್ಟಿ, ದಿನೇಶ್ ಶೆಟ್ಟಿ ಉಪಸ್ಥಿತರಿದ್ದರು.



