ಉಡುಪಿ : ಸಾಸ್ತಾನ ಹಾಗೂ ಶಿರೂರು ಟೋಲ್ ಕೇಂದ್ರಗಳ ಮಾದರಿಯಲ್ಲಿ ಹೆಜಮಾಡಿ ಟೋಲ್ ವ್ಯಾಪ್ತಿಯ ಸ್ಥಳೀಯ ವಾಹನಗಳಿಗೂ ಸುಂಕ ವಿನಾಯಿತಿ ಅಥವಾ ಮಾಸಿಕ ಪಾಸ್ ಸೌಲಭ್ಯ ಕಲ್ಪಿಸುವಂತೆ ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿಗೆ ಶಿಫಾರಸು ಪತ್ರ ಬರೆಯಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದ್ದಾರೆ. ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ ಟೋಲ್ ಸುಂಕ ವಸೂಲಾತಿಗೆ ಸಂಬಂಧಿಸಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾಸ್ತಾನ ಟೋಲ್ ಕೇಂದ್ರದಲ್ಲಿ 10 ಕಿ.ಮೀ. ವ್ಯಾಪ್ತಿಯ ಸ್ಥಳೀಯ ವಾಹನಗಳಿಗೆ ರಿಯಾಯಿತಿ ನೀಡಲಾಗುತ್ತಿದೆ. ಆದರೆ ಹೆಜಮಾಡಿ ಟೋಲ್ ವ್ಯಾಪ್ತಿಯಲ್ಲಿ ಈ ಸೌಲಭ್ಯ ಇಲ್ಲದಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿವೆ. ಹೆಜಮಾಡಿ ಟೋಲ್ ಸುತ್ತಮುತ್ತಲಿನ ನಿವಾಸಿಗಳು ದಿನನಿತ್ಯದ ಕೆಲಸ ಕಾರ್ಯಗಳಿಗೆ ಹಲವು ಬಾರಿ ಟೋಲ್ ಮೂಲಕ ಸಂಚರಿಸಬೇಕಾಗಿರುವುದರಿಂದ ಪ್ರತಿಬಾರಿಯೂ ಸುಂಕ ಪಾವತಿಸುವುದು ಕಷ್ಟವಾಗುತ್ತಿದೆ. ಹೀಗಾಗಿ ಸಾಸ್ತಾನ ಮಾದರಿಯಲ್ಲೇ ಹೆಜಮಾಡಿಯಲ್ಲೂ ಸ್ಥಳೀಯರಿಗೆ ವಿನಾಯಿತಿ ನೀಡುವಂತೆ ಜಿಲ್ಲಾಡಳಿತದಿಂದ ಶಿಫಾರಸು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.

ನಿಗದಿತ ವ್ಯಾಪ್ತಿಯಲ್ಲಿ ವಾಸಿಸುವ ಸ್ಥಳೀಯರ ವಾಹನಗಳಿಗೆ ಸುಂಕ ವಿನಾಯಿತಿ ಅಥವಾ ಮಾಸಿಕ ಪಾಸ್ ನೀಡುವುದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು. ರಾಷ್ಟ್ರೀಯ ಹೆದ್ದಾರಿ 66ರ ಕೆಲವು ಭಾಗಗಳಲ್ಲಿ ಸರ್ವೀಸ್ ರಸ್ತೆ ನಿರ್ಮಾಣಕ್ಕೆ ಅನುಮತಿ ದೊರೆತಿದ್ದು, ಕಾಮಗಾರಿಯನ್ನು ಶೀಘ್ರ ಆರಂಭಿಸಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಹೆದ್ದಾರಿಗಳಲ್ಲಿ ಸರ್ವೀಸ್ ರಸ್ತೆ, ರಸ್ತೆ ರಿಫ್ಲೆಕ್ಟರ್, ದಾರಿದೀಪ ಅಳವಡಿಕೆ, ಹೊಂಡ-ಗುಂಡಿಗಳ ದುರಸ್ತಿ, ಒಳಚರಂಡಿ ವ್ಯವಸ್ಥೆ ಹಾಗೂ ಜಂಕ್ಷನ್ಗಳಲ್ಲಿ ಸೂಕ್ತ ಸೂಚನಾ ಫಲಕ ಅಳವಡಿಸುವಂತಹ ಸುರಕ್ಷತಾ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳಬೇಕು. ಅಪಘಾತ ತಡೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಸ್ಥಳೀಯರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹೆಜಮಾಡಿ ಟೋಲ್ ವ್ಯಾಪ್ತಿಯ ಸ್ಥಳೀಯರಿಗೆ ಸಾಸ್ತಾನ ಮಾದರಿಯಲ್ಲಿ ವಿನಾಯಿತಿ ನೀಡಬೇಕು, ಸರ್ವೀಸ್ ರಸ್ತೆ ನಿರ್ಮಿಸಬೇಕು, ರಸ್ತೆ ದೀಪ ಅಳವಡಿಸಬೇಕು ಹಾಗೂ ಟೋಲ್ ಸಿಬ್ಬಂದಿ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಕಿರಣ್ ಎಸ್., ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ ಜಾವೇದ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಅಭಿಯಂತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.


